ಕೊಪ್ಪಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಈ ಸಂಪುಟದಲ್ಲಿ ಕೊಪ್ಪಳ ಜಿಲ್ಲೆಗೆ ಅವಕಾಶ ಸಿಗುವ ನಿರೀಕ್ಷೆ ಇದೆ ಎಂದು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ನಾವು ಮೂವರೂ ಶಾಸಕರಿಗೆ ಸಚಿವರಾಗುವ ಅರ್ಹತೆಇದೆ ಮತ್ತು ಮೂವರೂ ಪ್ರಬುದ್ಧರಿದ್ದೇವೆ. ನಮ್ಮಲ್ಲಿ ಯಾರನ್ನು ಸಚಿವರನ್ನಾಗಿ ಮಾಡುತ್ತಾರೋ ಗೊತ್ತಿಲ್ಲ. ಆದರೆ ಪ್ರಾದೇಶಿಕವಾಗಿ ಕೊಪ್ಪಳ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಬೇಕು ಎಂದರು.
ಈ ಬಗ್ಗೆ ಹಿಂದೆ ಯಡಿಯೂರಪ್ಪ ಅವರಿಗೂ ಮನವಿ ಮಾಡಿಕೊಂಡಿದ್ದೆವು. ಆದರೆ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಸಿಎಂ ಬೊಮ್ಮಾಯಿ ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರಲ್ಲಿ ಪಟ್ಟಿಗೆ ಒಪ್ಪಿಗೆ ಪಡೆದಿರಬಹುದು. ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ವೈಯಕ್ತಿಕವಾಗಿ ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಕೇಳಿದ್ದೇನೆ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.