ಕೊಪ್ಪಳ: ವ್ಯಕ್ತಿ ಬದುಕಿದ್ದಾಗಲೇ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವಿರುದ್ಧ ವ್ಯಕ್ತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಲಾಚನಕೇರಿ ಗ್ರಾಮದ ಫಕೀರಪ್ಪ ದೊಡ್ಡಮನಿ ಎಂಬ ವ್ಯಕ್ತಿಯನ್ನು ಅಪಘಾತದಲ್ಲಿ ಗಾಯಗೊಂಡ ಪರಿಣಾಮ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿಯಿಂದ ಫಕೀರಪ್ಪನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಆಸ್ಪತ್ರೆ ಸಿಬ್ಬಂದಿ ನೀಡಿದ ಡಿಸ್ಚಾರ್ಜ್ ಸಮರಿಯಲ್ಲಿ ಡೆತ್ ಎಂಬ ಪದ ನಮೂದಾಗಿದ್ದು, ಸಂಬಂಧಿಕರಲ್ಲಿ ಗೊಂದಲ ಮೂಡಿಸಿದೆ. ಇನ್ನು ಈ ಬಳಿಕ ದೇಹವನ್ನು ಸಂಬಂಧಿಕರು ಪರಿಶೀಲಿಸಿದಾಗ ವ್ಯಕ್ತಿ ಇನ್ನೂ ಉಸಿರಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಸಂಬಂಧಿಕರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೆ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಖಾಸಗಿ ಆಸ್ಪತ್ರೆಯವರು ಆ್ಯಂಬುಲೆನ್ಸ್ ನೀಡಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಬಳಿಕ ಆಟೋದಲ್ಲಿ ಗಾಯಾಗಳುವನ್ನು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.