ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಬಿಸಿಯೂಟ ಸೇವಿಸಿದ ಬಳಿಕ ವಾಂತಿ ಬೇಧಿಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ನಡೆದಿದೆ. ವಿದ್ಯಾರ್ಥಿನಿಯರು ಸೇವಿಸಿದ ಆಹಾರ ಕಳಪೆಯಾಗಿರುವುದರಿಂದಲೇ ವಾಂತಿಯಾಗಿದೆ ಎಂದು ಪೋಷಕರು ಆರೋಪಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
ಶಾಲೆಯಲ್ಲಿ ಒಟ್ಟು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಲ್ಲಿ 20 ವಿದ್ಯಾರ್ಥಿನಿಯರಿಗೆ ಮುಂಜಾನೆಯಿಂದಲೇ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಅಲ್ಲದೇ ಸೋಮವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದು ಸಂಜೆ ವೇಳೆ ಕೆಲವರಿಗೆ ವಾಂತಿಯಾಗಿದೆ.
ತಕ್ಷಣವೇ ವಾಂತಿ ಮಾಡಿಕೊಂಡ ವಿದ್ಯಾರ್ಥಿಗಳನ್ನು ಅಳವಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥರಾಗಿದ್ದು, ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಆಗಮಿಸಿದ್ದು, ವಾಂತಿ ಆಗಲು ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮೀಸಲಾತಿ ಹೆಚ್ಚಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು: ನಿಲುವಳಿ ಸೂಚನೆ ಮಂಡಿಸಿದ ಸಿದ್ದರಾಮಯ್ಯ