ಗಂಗಾವತಿ: ಆದಿಚುಂಚನಗಿರಿ ಮಠದಲ್ಲಿ ನಡೆದ ರಾಜ್ಯಮಟ್ಟದ ಇನ್ಸ್ಪೈಯರ್ ಸೈನ್ಸ್ ಅಂಡ್ ಟೆಕ್ನಾಲಜಿ ವಸ್ತು ಪ್ರದರ್ಶನದಲ್ಲಿ ಗಂಗಾವತಿ ತಾಲ್ಲೂಕಿನ ಇಬ್ಬರು ಮಕ್ಕಳು ಭಾಗವಹಿಸಿ ರಾಷ್ಟ್ರಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ಧಿ ಇಲಾಖೆಯ ಜಂಟಿ ಪ್ರಾಯೋಜತಕತ್ವದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಮಾರುತಿ, ವಿನಯ್ ಕುಮಾರ್ ಆಯ್ಕೆಯಾಗಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಸಾಮೂಹಿಕ ಮೂತ್ರಾಲಯಗಳನ್ನು ಸ್ವಯಂ ಚಾಲಿತವಾಗಿ ಹೇಗೆ ಸ್ವಚ್ಛಗೊಳಿಸಿಕೊಳ್ಳಬಹುದು ಎಂಬ ಮಾದರಿಯನ್ನು ಪ್ರದರ್ಶಿಸಿದ ನಗರದ ಲಯನ್ಸ್ ಕ್ಲಬ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಮಾರುತಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ ನವಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ವರ್ಗದ ವಿದ್ಯಾರ್ಥಿ ವಿನಯ್ ಕುಮಾರ್, ಸಿನಿಮಾ ಮಂದಿರಗಳಲ್ಲಿ ಪೈರಸಿ ನಿಯಂತ್ರಣ ಹೇಗೆ ಸಾಧ್ಯ ಎಂಬ ಮಾದರಿ ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.