ಕೊಪ್ಪಳ: ಕೊರೊನಾ ಚಿಕಿತ್ಸೆ ವಿಷಯದಲ್ಲಿ ಕೊಪ್ಪಳ ಸೇರಿದಂತೆ ರಾಜ್ಯದಲ್ಲಿ ಸರಿಯಾದ ವ್ಯವಸ್ಥೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ ಎಂಬ ದೂರುಗಳಿವೆ. ಅದು ಸತ್ಯವೂ ಸಹ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ ಅವ್ಯವಸ್ಥೆ ತಾಂಡವಾಡುತ್ತಿದೆ. ಕೊರೊನಾದಿಂದ ಜನರ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು ಎಂದರು.
ಕೊರೊನಾ ಚಿಕಿತ್ಸೆಗೆ ಬೇಕಾದ ಅಗತ್ಯ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು ಎಂದು ಈ ಹಿಂದೆ ನಡೆದ ಸಭೆಯಲ್ಲಿ ಒತ್ತಾಯಿಸಿದ್ದೇನೆ. ಖಾಸಗಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಿಗಬೇಕು ಎಂದು ನಾನು ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದರು.
ಇನ್ನು ಸಿಂಗಟಾಲೂರು ಏತ ನೀರಾವರಿ ಯೋಜನೆ ಮೂಲಕ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿನ 14 ಕೆರೆ ತುಂಬಿಸುವ ಯೋಜನೆಯನ್ನು ರೂಪಿಸಲಾಗಿದೆ. 22.18 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಷೇತ್ರದ ಅಳವಂಡಿ, ಸಿಂದೋಗಿ, ಕೋಳೂರು, ಬೆಳಗಟ್ಟಿ, ಹಟ್ಟಿ, ಮುಸ್ಲಾಪುರ, ಮೋರನಾಳ, ಬೆಟಗೇರಿ, ಹಂದ್ರಾಳ ಸೇರಿದಂತೆ 14 ಕೆರೆಗಳನ್ನು ತುಂಬಿಸಲಾಗುತ್ತದೆ. ಇದರ ಜೊತೆಗೆ 1100 ಕೋಟಿ ರೂಪಾಯಿ ವೆಚ್ಚದಲ್ಲಿ ಹನಿ ನೀರಾವರಿ ಯೋಜನೆಗೆ ಟೆಂಡರ್ ಕರೆಯಲಾಗಿದ್ದು, ಇದರಿಂದ 25,000 ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ ಎಂದರು.
ಬೆಟಗೇರಿ ಮತ್ತು ಅಳವಂಡಿ ಭಾಗದ ರೈತರಿಗೂ ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆಯಿಂದ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿವಿಧ ನೀರಾವರಿ ಯೋಜನೆಗಳ ಮೂಲಕ ಕ್ಷೇತ್ರದಲ್ಲಿ ಬಹುಪಾಲು ನೀರಾವರಿಯಾಗಲಿದೆ ಎಂದರು.
ತಾಲೂಕಿನ ಲಿಂಗದಹಳ್ಳಿಯಲ್ಲಿ 27.5 ಕೋಟಿ ರೂಪಾಯಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆ ಮೂಲಕ ನವೋದಯ ಮಾದರಿ ಶಾಲೆ ಪ್ರಾರಂಭವಾಗಲಿದೆ. ಇದಕ್ಕಾಗಿ ಲಿಂಗದಹಳ್ಳಿಯಲ್ಲಿ 18 ಎಕರೆ ಭೂಮಿ ಗುರುತಿಸಲಾಗಿದೆ ಎಂದರು.
ಇನ್ನು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸಾಕಷ್ಟು ನ್ಯೂನ್ಯತೆಗಳಿವೆ. ಈ ಎಲ್ಲ ನ್ಯೂನ್ಯತೆಗಳನ್ನು ಸರಿಪಡಿಸಲು ಸರ್ಕಾರವನ್ನು ಆಗ್ರಹಿಸಿದ್ದೇನೆ. ಜಿಲ್ಲಾಸ್ಪತ್ರೆ ಅಧಿಕಾರಿಗಳಲ್ಲಿ ಹೊಂದಾಣಿಕೆ ತರುವ ಕೆಲಸವನ್ನು ಮಾಡಿದ್ದೇವೆ. ರೋಗಿಗಳ ಚಿಕಿತ್ಸೆಗೆ ಯಾವುದೇ ರೀತಿ ತೊಂದರೆಯಾಗದಂತೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಇದೇ ಸಂದರ್ಭದಲ್ಲಿ ಹೇಳಿದರು.