ಕೊಪ್ಪಳ: ಉತ್ತರ ಪ್ರದೇಶದ ಹಥ್ರಾಸ್ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶದಲ್ಲಿ ಮಹಿಳೆಯರ, ದಲಿತರ, ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿವೆ. ಹಥ್ರಾಸ್ನಲ್ಲಿ ನಡೆದ ಪ್ರಕರಣ ಬೆಚ್ಚಿ ಬೀಳಿಸಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಥ್ರಾಸ್ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ದಲಿತರ ಸಂವಿಧಾತ್ಮಕ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಕೊಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣ ಪ್ರಮಾಣದ ಕೂಲಿ ಹಣ ಜಮಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.