ಕೊಪ್ಪಳ: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಮಳೆ ಹಾನಿಯಿಂದ ಸುಮಾರು 200 ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿದ್ದು, ಅಲ್ಲಲ್ಲಿ ಬೆಳೆಗಳು ಹಾನಿಗೊಳಗಾಗಿವೆ.
ಈ ಕುರಿತಂತೆ ಈಟಿವಿ ಭಾರತ್ಗೆ ದೂರವಾಣಿ ಮೂಲಕ ಮಾಹಿತಿ ನೀಡಿರುವ ಕುಷ್ಟಗಿ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್, ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನ ಅಲ್ಲಲ್ಲಿ ವ್ಯಾಪಕ ಮಳೆಯಾಗಿದೆ. ಮಳೆಯಿಂದಾಗಿ ಸುಮಾರು 14 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆ ಹಾಗೂ 2 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆ ಹಾನಿಗೊಳಗಾಗಿದೆ. ಅಲ್ಲದೆ 200 ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿದ್ದು, ಭಾಗಶಃ ಹಾನಿಗೊಳಗಾಗಿವೆ. ಆಗಿರುವ ಹಾನಿ ಕುರಿತಂತೆ ಜಂಟಿ ಸಮೀಕ್ಷೆ ನಡೆಸಿ, ವರದಿಯನ್ನು ಸರ್ಕಾರಕ್ಕೆ ಕಳಿಸಲಾಗುತ್ತದೆ ಎಂದು ತಿಳಿಸಿದರು.