ಕೊಪ್ಪಳ : ಕೊರೊನಾ ಲಕ್ಷಣವಿರುವ ಜನರು ಖಾಸಗಿ ಆಸ್ಪತ್ರೆಗೆ ಬಂದರೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕಳಿಸಬೇಕು. ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್ಗಳಲ್ಲಿ ಮಾತ್ರೆಗಳನ್ನು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಕೊರೊನಾ ನಿಯಂತ್ರಣ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೆ.
ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಲಕ್ಷಣಗಳಿರುವ ಜನರನ್ನು ಖಾಸಗಿ ವೈದ್ಯರು ಸರ್ಕಾರಿ ಆಸ್ಪತ್ರೆಗೆ ಕಳಿಸಬೇಕು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಸಾರ್ವಜನಿಕರ ಹಾಗೂ ರೈತರ ಅನುಕೂಲಕ್ಕಾಗಿ ವಾರದಲ್ಲಿ ನಾಲ್ಕು ದಿನ ಮಧ್ಯಾಹ್ನ 12 ಗಂಟೆಯವರೆಗೆ ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ.
ಇನ್ನು, ರೈತರ ಬಿತ್ತನೆ ಕಾರ್ಯಕ್ಕೆ ಅನುಕೂಲಕ್ಕಾಗಿ ಮಧ್ಯಾಹ್ನ 12 ಗಂಟೆಯವರೆಗೆ ರೈತ ಸಂಪರ್ಕ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ಇಂದು ಸಭೆ ನಡೆಸಲಾಗಿದ್ದು, ಮುಕುಂದ ಕಾರ್ಖಾನೆಯಲ್ಲಿ 200 ಹಾಸಿಗೆಯ ಕೋವಿಡ್ ಆಸ್ಪತ್ರೆ ಆರಂಭಿಸಲು ಒಪ್ಪಿಕೊಂಡಿದ್ದಾರೆ. ವೆಂಟಿಲೇಟರ್ನಂತೆ ಕೆಲಸ ಮಾಡುವ 30 ಬೈ ಪ್ಯಾಕ್ ಉಪಕರಣ ಖರೀದಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಕೋವಿಡ್ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಮುಚ್ಚಿಡಲು ಸಾಧ್ಯವಿಲ್ಲ. ಕನಕಗಿರಿ ಕ್ಷೇತ್ರದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಆಕ್ಸಿಜನ್ ಯುಕ್ತ ಕೋವಿಡ್ ಕೇರ್ ಸೆಂಟರ್ ಮಾಡಲಾಗುವುದು ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.