ಕೊಪ್ಪಳ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಭಾರತೀಯ ಕಿಸಾನ್ ಸಂಘದ ಕೊಪ್ಪಳ ಜಿಲ್ಲಾ ಸಮಿತಿ ಮುಖಂಡರು ಬಲವಾಗಿ ಖಂಡಿಸಿದ್ದಾರೆ.
ಈ ಕುರಿತಂತೆ ನಗರದ ಮೀಡಿಯಾ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ದೇವೇಂದ್ರಗೌಡ ಕಡ್ಡಿಪುಡಿ, ಭೂಸುಧಾರಣಾ ಕಾಯ್ದೆ 1961ರ ಸೆಕ್ಷನ್ 79ಎಬಿ, 63ಎ ಹಾಗೂ 80 ಕಲಂಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿ ಕಾಯ್ದೆ ಮೂಲಕ ರೈತರನ್ನು ಬೀದಿಪಾಲು ಮಾಡುತ್ತಿದೆ. ಬಂಡವಾಳ ಶಾಹಿಗಳಿಗೆ ಇದರಿಂದ ಬಹಳಷ್ಟು ಅನುಕೂಲವಾಗಲಿದೆ. ರೈತರು ತಮಗೆ ಇರುವ ಅಲ್ಪಸ್ವಲ್ಪ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಕೃಷಿಕರಲ್ಲದ ಬಂಡವಾಳ ಶಾಹಿಗಳು ಹೆಚ್ಚಿನ ಪ್ರಮಾಣದ ಭೂಮಿಯನ್ನು ಹೊಂದಲು ಈ ತಿದ್ದುಪಡಿ ಕಾಯ್ದೆ ಅವಕಾಶ ನೀಡುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.