ಕೊಪ್ಪಳ: ಬಜೆಟ್ನಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ಶೇ. 41ರಷ್ಟು ಅನುದಾನ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಲಭ್ಯವಾಗುತ್ತಿದೆ. ಇದರಿಂದ ಉದ್ಯೋಗ ಅರಸಿಕೊಂಡು ಬೇರೆ ಊರಿಗೆ ಹೋಗುತ್ತಿದ್ದ ಜನರು, ಇಲ್ಲಿಯೇ ಕೆಲಸ ಮಾಡಿಕೊಂಡು ಜೀವನ ನಡೆಸಲು ಅನುಕೂಲವಾಗುತ್ತಿದೆ.
ಈಗ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸದ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ 73 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ಬಾರಿ ಶೇ. 41ರಷ್ಟು ಅನುದಾನ ಕಡಿತ ಮಾಡಲಾಗಿದೆ. ಇದರಿಂದ ಜನರಿಗೆ ಅನಾನುಕೂಲವಾಗಲಿದೆ. ಜನರಿಗೆ ಕನಿಷ್ಠ 200 ದಿನಗಳ ಕಾಲ ಉದ್ಯೋಗ ನೀಡಬೇಕು ಹಾಗೂ ಪ್ರತಿ ದಿನ 600 ರೂ. ಕೂಲಿ ನೀಡಬೇಕು ಎಂದು ಒತ್ತಾಯಿಸಿದರು.