ಕೊಪ್ಪಳ: ಕೊರೊನಾ ಭೀತಿಯ ನಡುವೆಯೂ ಜಿಲ್ಲೆಯಲ್ಲಿ ಇಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪ್ರಾರಂಭಗೊಂಡಿದ್ದು, ಕೊಪ್ಪಳದಲ್ಲಿ 6 ಹಾಗೂ ಗಂಗಾವತಿಯಲ್ಲಿನ 2 ಕೇಂದ್ರ ಸೇರಿ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3288 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ವೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆಯೇ ಪಾಲಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ತಂದು ಬಿಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷೆಗೆ ಬಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಡ್ಡಾಯ ಮಾಸ್ಕ್ ಧರಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ಹಾಕಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು.