ಕೊಪ್ಪಳ: ಜಿಲ್ಲೆಯ ಕಾರಟಗಿಯಲ್ಲಿ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು ಜನರನ್ನು ಹಣ ಕೊಟ್ಟು ಕರೆದುಕೊಂಡು ಬಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಜನರಿಗೆ ಹಣ ಹಂಚುತ್ತಿರುವ ವಿಡಿಯೋ ವೈರಲ್ ಆಗಿ ಭಾರೀ ಸದ್ದು ಮಾಡುತ್ತಿದೆ. ಜಿಲ್ಲೆಯ ಕಾರಟಗಿಯಲ್ಲಿ ಇಂದು ಗ್ರಾಮ ಪಂಚಾಯತ್ ಸದಸ್ಯರ ಅಭಿನಂದನಾ ಸಮಾರಂಭ ನಡೆಯಿತು. ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಜನರನ್ನು ಟ್ರ್ಯಾಕ್ಟರ್ಗಳಲ್ಲಿ ಕರೆ ತರಲಾಗಿತ್ತು. ಕಾರ್ಯಕ್ರಮಕ್ಕೆ ಬಂದ ಜನರಿಗೆ ಹಣ ನೀಡಿ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಯೊಬ್ಬರಿಗೂ 500 ರೂ.ನಂತೆ ಹಣ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.