ಕೊಪ್ಪಳ: ಸಂಭಾವ್ಯ ಕೋವಿಡ್ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸಲಿದೆ ಎಂಬ ತಜ್ಞರ ವರದಿ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಹಾಗೂ ಇತರೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯಲ್ಲಿ ಸುಮಾರು 700ಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ ಕುರಿತಂತೆ ಪಾಲಕರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಶಾಂತಬಾಬು, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಹಾಗೂ ಅವರ ಆರೋಗ್ಯ ಕಾಪಾಡಲು ಮಕ್ಕಳ ಪಾಲಕರಿಗೆ ಸಂಬಂಧಿಸಿದ ಇಲಾಖೆ ಸೂಚನೆ ನೀಡಿದೆ. ಸಂಭಾವ್ಯ ಕೊರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲು ಸುಮಾರು 50 ಬೆಡ್ನ ಪ್ರತ್ಯೇಕ ವಾರ್ಡ್ ಸಜ್ಜು ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ: ಬಿಎಸ್‌ವೈ ಅವರನ್ನು ಸಿಎಂ ಮಾಡಿದ್ದೇ ನಾನು: ಚಂದ್ರಕಾಂತ ಬೆಲ್ಲದ
ಅಲ್ಲದೇ ಮಕ್ಕಳ ಚಿಕಿತ್ಸೆಗೆ ಬೇಕಾದ ವೆಂಟಿಲೇಟರ್ ಖರೀದಿಸಲಾಗುತ್ತಿದೆ. ಆಕ್ಸಿಜನ್ ಸಮಸ್ಯೆ ಇಲ್ಲ. ಸದ್ಯ ವೈದ್ಯರು, ಸಿಬ್ಬಂದಿಯ ಕೊರತೆ ಇಲ್ಲ. ಮುಂದಿನ ಪರಿಸ್ಥಿತಿಗೆ ತಕ್ಕಂತೆ ಮಕ್ಕಳ ತಜ್ಞ ವೈದ್ಯರು ಬೇಕಾಗಬಹುದು. ಅವರನ್ನು ನೇಮಕ ಮಾಡಲಾಗುತ್ತದೆ. ಮೂರನೇ ಅಲೆ ಎದುರಿಸಲು ಈಗಿನಿಂದಲೇ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಶಾಂತಬಾಬು ತಿಳಿಸಿದರು.