ಕೊಪ್ಪಳ: ಕಾಂಗ್ರೆಸ್ನವರು ಒಂದು ವರ್ಷದ ಹಿಂದೆ ನಮ್ಮನ್ನು ಅನರ್ಹರನ್ನಾಗಿ ಮಾಡಿದರು. ಆದರೆ ಮುಂದೆ ಕಾಂಗ್ರೆಸ್ನವರನ್ನು ಜನರೇ ಅನರ್ಹರನ್ನಾಗಿ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದರು.
ನಗರದ ಕೆಇಬಿ ರಸ್ತೆಯಲ್ಲಿ ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ನಮ್ಮನ್ನು ಅನರ್ಹರನ್ನಾಗಿ ಮಾಡಿ ನಾಳೆಗೆ ಒಂದು ವರ್ಷವಾಗುತ್ತದೆ. ಅವರು ನಮ್ಮನ್ನು ಅನರ್ಹರನ್ನಾಗಿ ಮಾಡಿದರು. ಆದರೆ ಜನರು ನಮ್ಮನ್ನು ಆಯ್ಕೆ ಮಾಡಿ ಅರ್ಹರನ್ನಾಗಿ ಮಾಡಿ ಸೇವೆಗೆ ಅವಕಾಶ ನೀಡಿದ್ದಾರೆ. ಅಂದು ನಮ್ಮನ್ನು ಅನರ್ಹರನ್ನಾಗಿ ಮಾಡಿದ ಕಾಂಗ್ರೆಸ್ನವರನ್ನು ಮುಂದಿನ ದಿನಗಳಲ್ಲಿ ಜನರೇ ಅನರ್ಹರನ್ನಾಗಿ ಮಾಡುತ್ತಾರೆ ಎಂದರು.
ಬರುವ 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಇದಕ್ಕೆ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು. ಸಂಕಷ್ಟದ ಸಂದರ್ಭದಲ್ಲಿಯೂ ಸಿಎಂ ಯಡಿಯೂರಪ್ಪ ಅವರು ಒಳ್ಳೆಯ ಆಡಳಿತ ನೀಡಿದ್ದಾರೆ ಎಂದು ಹೇಳಿದರು.
ಎಲ್ಲಾ ಕಡೆಯೂ ಕೊರೊನಾ ಸೋಂಕು ಹೆಚ್ಚುತ್ತಿದೆ. ಕೊರೊನಾ ಜೊತೆಗೆ ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಸಾವನ್ನಪ್ಪುತ್ತಿದ್ದಾರೆ. ಜಿಲ್ಲೆಯ ಗಂಗಾವತಿ ಭಾಗದಲ್ಲಿ ಕೊರೊನಾ ಸೋಂಕು ಪ್ರಮಾಣ ಜಾಸ್ತಿ ಇದೆ. ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.
ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ 21 ವೆಂಟಿಲೇಟರ್ ಖರೀದಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ. ಯಾರಾದರೂ ಕೃತಕ ಅಭಾವ ಸೃಷ್ಟಿಸಿ ಬೆಲೆ ಜಾಸ್ತಿ ಪಡೆದರೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಪಾಟೀಲ್ ಹೇಳಿದರು.