ಕೊಪ್ಪಳ: ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ರೈತರ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ತಾಲೂಕಿನ ಮುನಿರಾಬಾದ್ ತುಂಗಭದ್ರಾ ಕಾಡಾ ಕಚೇರಿಯಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಸಭೆಯಲ್ಲಿ 11 ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಹನಿ ಹಾಗೂ ತುಂತುರು ನೀರಾವರಿ ಯೋಜನೆಯಲ್ಲಿನ ಲೋಪದೋಷಗಳ ಕುರಿತು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಿಂಗಟಾಲೂರು ಎಡದಂಡೆ ನಾಲೆಯಿಂದ ರೈತರ ಭೂಮಿಗೆ ನೀರು ಹರಿಸಬೇಕು. ಅದಕ್ಕಾಗಿ ಕಾಲುವೆ, ಕೆರೆ ಅಥವಾ ರೈತರ ಹೊಲಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸುವ ಉದ್ದೇಶವಿದೆ. ಆ ನೀರನ್ನು ರೈತ ಹೇಗೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದರು.
ನಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ಇನ್ನು ಮುಂದೆ ಎಪ್ರಿಲ್ನಲ್ಲಿ ಆರಂಭಿಸಲಾಗುವುದು. ಕಾಲುವೆಗೆ ನೀರು ಹರಿಯದ ವೇಳೆ ಕಾಮಗಾರಿ ನಡೆಸಲು ಸೂಚನೆ ನೀಡಲಾಗುವುದು. ಅಲ್ಲದೆ ಹಿರೇಹಳ್ಳದಿಂದ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.