ಕೊಪ್ಪಳ: ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಆಧರಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರು ಆ ರೀತಿ ಹೇಳಿದ್ದಾರೆ ಎಂದು 'ರಾಹುಲ್ ಗಾಂಧಿ ಡ್ರಗ್ ಪೆಡ್ಲರ್'ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಕುರಿತಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ವಿನಾಃಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಸತ್ಯಾಸತ್ಯತೆಯ ಬಗ್ಗೆ ಕಾಂಗ್ರೆಸ್ನವರು ತಿಳಿದುಕೊಳ್ಳಬೇಕು. ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು.
ಅವರೊಬ್ಬ ಹೆಬ್ಬೆಟ್ಟು ಗಿರಾಕಿ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ. ಇದು ದೇಶದ 130 ಕೋಟಿ ಜನರ ಗೌರವಕ್ಕೆ ಚ್ಯುತಿ ತರುವಂತಾಗಿದೆ. ಇಡೀ ಜಗತ್ತು ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕಾಂಗ್ರೆಸ್ ನವರು ಈ ರೀತಿ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಚುನಾವಣಾ ಪೈಪೋಟಿ.. ಟ್ವೀಟ್ ವಾರ್ ಬಳಿಕ ರಾಹುಲ್ ವಿರುದ್ಧ ಕಟೀಲ್ ವಿವಾದಾತ್ಮಕ ಹೇಳಿಕೆ
ಇದೇ ವೇಳೆ, ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಕುರಿತಂತೆ ಮಾತನಾಡಿದ ಹಾಲಪ್ಪ ಆಚಾರ್, ಅವರ ತ್ಯಾಗದಿಂದ ನಮ್ಮ ಸರ್ಕಾರ ಬಂದಿದೆ. ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಸಚಿವ ಹಾಲಪ್ಪ ಆಚಾರ್ ಇದೇ ವೇಳೆ, ವಿಶ್ವಾಸ ವ್ಯಕ್ತಪಡಿಸಿದರು.