ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯದವರ ಜತೆ ಮಾತನಾಡಿದ ಅವರು, ಸುಮಾರು 14 ತಿಂಗಳಗಳ ಕಾಲ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿ ಬಳಿಕ ಸರ್ಕಾರ ಹೋದ ಬಳಿಕ ಈ ರೀತಿ ಕಿತ್ತಾಡೋದು ಯಾರಿಗೂ ಶೋಭೆ ತರುವುದಿಲ್ಲ. ರಾಜಕೀಯ ವ್ಯವಸ್ಥೆಯಲ್ಲಿ ಇವೆಲ್ಲಾ ಸಹಜ. ಆದರೆ, ಇದನ್ನು ನಮ್ಮ ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಇನ್ನು, ಮೂಲ ಕಾಂಗ್ರೆಸ್ಸಿಗರು, ವಲಸಿಗ ಕಾಂಗ್ರೆಸ್ ಎಂಬ ಯಾವುದೇ ಭಿನ್ನತೆ ಇಲ್ಲ. ಎಲ್ಲರೂ ಒಂದೇ ಎಂದರು.
ಈ ಹಿಂದೆ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ ಸರ್ಕಾರ ಇಂದು ಬೀಳುತ್ತೆ, ನಾಳೆ ಬೀಳುತ್ತೆ ಎಂದು ಮಾಧ್ಯಮಗಳು ತೋರಿಸಿದವು. ಈಗ ಬಿಜೆಪಿ ಸರ್ಕಾರವಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅದು ವಿಳಂಬ ಮಾಡುತ್ತಿದೆ. ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತ ವ್ಯವಸ್ಥೆಯಲ್ಲಿ ಹಾಗೂ ಹಣಕಾಸಿ ವ್ಯವಸ್ಥೆಯಲ್ಲಿ ಸಂಪೂರ್ಣ ಕುಸಿದಿದೆ. ಮುಂದಿನ ದಿನಮಾನಗಳಲ್ಲಿ ರಾಜ್ಯದ ಜನರು ಈ ಸರ್ಕಾರದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ತಾರೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಕಿಡಿಕಾರಿದರು.