ಕೊಪ್ಪಳ: ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಜು.21 ರಂದು ಜಿಲ್ಲೆಯ ಕನಕಗಿರಿಯಲ್ಲಿ 39 ನೇ ರೈತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಸವನಗೌಡ ಪಾಟೀಲ್ ತಿಳಿಸಿದ್ದಾರೆ.
ನಗರದ ಮೀಡಿಯಾ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ, ರೈತರ ಸಮಸ್ಯೆ ಹಾಗೆ ಉಳಿದಿವೆ. ಆಳುವ ಸರ್ಕಾರಗಳು ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಸಂಕಷ್ಟಗಳ ಪರಿಹಾರಕ್ಕಾಗಿ ಸಂಘಟನೆ ನಿರಂತರವಾಗಿ ಹೋರಾಟ ಮಾಡುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದು ಸೇರಿದಂತೆ ರೈತರ ಸಮಸ್ಯೆಗಳಿಗೆ ಸಂಘಟನೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಇದೇ ಜು. 21 ರಂದು ಜಿಲ್ಲೆಯ ಕನಕಗಿರಿಯ ಎಪಿಎಂಸಿ ಬಳಿ 39 ನೇ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ. ರಾಜ್ಯಾಧ್ಯಕ್ಷ ವಿಶ್ವನಾಥಪುರ ಆರ್. ನಾರಾಯಣರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವೈಜ್ಞಾನಿಕ ಬೇಸಾಯ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದರು.
ಈ ವೇಳೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಕ್ಕಮಹಾದೇವಿ ಸೇರಿದಂತೆ ಸಂಘಟನೆಯ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.