ಕೊಪ್ಪಳ: ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು ಹಾಗೂ ವಿದ್ಯಾರ್ಥಿಗಳ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಈವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆದಿಲ್ಲ. ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಮುಗಿದಿದೆ. ಆದರೂ ಅರ್ಜಿ ಕರೆದಿಲ್ಲ. ವಿದ್ಯಾರ್ಥಿಗಳು ಹಾಗೂ ಪಾಲಕರು ನಿತ್ಯವೂ ಸೈಬರ್ ಸೆಂಟರ್ಗಳಿಗೆ ಹಾಗೂ ಶಾಲೆಗಳಿಗೆ ಅರ್ಜಿ ಹಾಕಲು ಓಡಾಡುತ್ತಿದ್ದಾರೆ. ಅರ್ಜಿ ಸಲ್ಲಿಸದಿದ್ದರೆ ಹೊಸ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುತ್ತಾರೆ. ಹೀಗಾಗಿ ಕೂಡಲೇ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇನ್ನು, ಹಿಂದುಳಿದ ವರ್ಗಗಳ ಇಲಾಖೆಯು ವಿದ್ಯಾರ್ಥಿ ವೇತನದ ಅರ್ಜಿ ವಿಷಯದಲ್ಲಿ ಸಾಕಷ್ಟು ಗೊಂದಲ ಉಂಟುಮಾಡಿದೆ. ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳನ್ನೂ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಬೇಕು ಹಾಗೂ ಎಲ್ಲಾ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮತ್ತೊಂದೆಡೆ ಗಂಗಾವತಿಯಲ್ಲೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಾಲೂಕು ಪಂಚಾಯತ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.