ಕೊಪ್ಪಳ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಗಳ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಗಳ ವಿರುದ್ಧ ಬೇಜವಾಬ್ದಾರಿ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿ ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶ ಮಾಡಿದ್ದಾರೆ. ಮತ್ತೊಂದೆಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಗಮ ಹೆಸರಿನಲ್ಲಿ ತರಗತಿ ನಡೆಸುತ್ತಿದ್ದಾರೆ.
ಕೊರೋನಾದಿಂದಾಗಿ ಕಳೆದ 6 ತಿಂಗಳಿನಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಸಚಿವರಿಗೆ ಏಕಿಷ್ಟು ಅಸಡ್ಡೆ ಎಂದು ಪ್ರಶ್ನಿಸಿದರು.
ಶಾಲೆ ಪುನಾರಂಭದ ಕುರಿತು ಸ್ಪಷ್ಟ ಆದೇಶ ನೀಡಿ ಪಾಲಕರಿಗೆ ಮತ್ತು ಮಕ್ಕಳಿಗೆ ಗೊಂದಲವಾಗದಂತೆ ಆದೇಶ ಮಾಡಬೇಕು. ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಬೇಜವಾಬ್ದಾರಿ ಹೇಳಿಕೆ ನೀಡುವುದು ಮತ್ತು ಮಲತಾಯಿ ಧೋರಣೆ ಅನುಸರಿಸುವುದನ್ನು ಬಿಡಬೇಕು ಎಂಬ ಒತ್ತಾಯ ಸೇರಿ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.