ಕೊಪ್ಪಳ: ಸುಗ್ರೀವಾಜ್ಞೆಯನ್ನು ದುರ್ಬಳಕೆ ಮಾಡಿಕೊಂಡು ಜಾರಿಗೊಳಿಸಲಾಗಿರುವ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸುಗ್ರೀವಾಜ್ಞೆಗಳ ಮೂಲಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೊಳಿಸುವ ಮೂಲಕ ರೈತ ವಿರೋಧಿ ಧೋರಣೆಯನ್ನು ಸರ್ಕಾರ ಅನುಸರಿಸುತ್ತಿದೆ. ಈ ಕಾಯ್ದೆಗಳಿಂದ ಎಪಿಎಂಸಿಯನ್ನು ಸಂಪೂರ್ಣ ಖಾಸಗೀಕರಣ ಮಾಡಿ ವ್ಯವಸ್ಥೆಯನ್ನು ಹದಗೆಡಿಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರ ರೈತರ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ. ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕೊರೊನಾ ಭೀತಿಯಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ ಕೊರೊನಾ ಹೆಸರಿನಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ಲೆಕ್ಕವನ್ನೂ ಕೊಡುತ್ತಿಲ್ಲ. ಈ ಸಂದರ್ಭದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಸಂಬಂಧಿತ ಲೆಕ್ಕ ಕೊಡಬೇಕು, ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸಲಾಗಿರುವ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯಬೇಕು. ಸರ್ಕಾರದ ಹಲವಾರು ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.