ಗಂಗಾವತಿ(ಕೊಪ್ಪಳ): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ನಡೆಸಿದ ದಾಳಿ ರಾಜಕೀಯ ಪ್ರೇರಿತವಾಗಿದೆ. ಉನ್ನತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ನಾನಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಂದಾಳತ್ವ ವಹಿಸಿಕೊಂಡಿರುವ ಡಿ ಕೆ ಶಿವಕುಮಾರ್ ಅವರ ಮೇಲೆ ದಾಳಿ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಮುಖಂಡರು ದಾಳಿಯ ಹಿಂದಿನ ಉದ್ದೇಶವನ್ನು ಸ್ಪಷ್ಟವಾಗಿ ತೋರಿಸಿದ್ದಾರೆ.
ಬಿಜೆಪಿಗರು ದ್ವೇಷದ ರಾಜಕಾರಣಕ್ಕೆ ಬೆಲೆ ತೆರುವ ದಿನಗಳು ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕನ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಬಿಜೆಪಿಗರಿಗೆ ಸಾಧ್ಯವಿಲ್ಲ ಎಂದರು.
ಕೇಂದ್ರದ ತಾಳಕ್ಕೆ ತಕ್ಕಂತೆ ಸಿಬಿಐ ಕುಣಿಯುತ್ತಿದೆ. ಈ ಸಂಸ್ಥೆಯ ಮೇಲಿರುವ ವಿಶ್ವಾಸ ಜನರಿಗೆ ನಿಧಾನವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ದೊಡ್ಡ ಭ್ರಷ್ಟಾಚಾರದಲ್ಲಿ ತೊಡಗಿರುವ ಹಾಗೂ ಅಧಿಕಾರವನ್ನು ಸಂಪೂರ್ಣ ದುರುಪಯೋಗ ಮಾಡಿಕೊಂಡಿರುವ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಅಕ್ರಮಗಳು ಮಾತ್ರ ಸಿಬಿಐ ಕಣ್ಣಿಗೆ ಕಾಣುತ್ತಿಲ್ಲ ಎಂದು ಆರೋಪಿಸಿದರು.