ಕೊಪ್ಪಳ: ರಾಜ್ಯ ಸರ್ಕಾರದಲ್ಲಿ ಸಾಕಷ್ಟು ನ್ಯೂನತೆಗಳು ಇವೆ. ಹೀಗಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಡೆಸಲು ಉದ್ದೇಶಿಸಿದ್ದ ರಾಜ್ಯದ ಎಲ್ಲ ಡಿಸಿಗಳೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಭೆಗೆ ಸರ್ಕಾರ ನಿರ್ಬಂಧ ವಿಧಿಸಿದೆ ಎಂದು ಕೊಪ್ಪಳದ ಕೈ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರದ ಸಾಕಷ್ಟು ನ್ಯೂನತೆಗಳು ಇವೆ. ಪ್ರತಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆಯುವುದರಲ್ಲಿ ತಪ್ಪೇನಿದೆ ಎಂದರು.
ಆಡಳಿತ ಸರ್ಕಾರದ ವೈಫಲ್ಯವನ್ನು ಅಥವಾ ಆಡಳಿತ ಪಕ್ಷಕ್ಕೆ ಸಲಹೆ ಸೂಚನೆಗಳನ್ನು ನೀಡುವುದು ವಿರೋಧ ಪಕ್ಷದ ನಾಯಕರ ಕರ್ತವ್ಯ. ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರೆ ಎಲ್ಲಿ ಸರ್ಕಾರದ ನ್ಯೂನತೆಗಳು ಜನರಿಗೆ ಗೊತ್ತಾಗಿಬಿಡುತ್ತದೆಯೋ ಎಂಬ ಭಯ ಆಡಳಿತ ಪಕ್ಷದ ನಾಯಕರಿಗೆ ಕಾಡುತ್ತಿದೆ ಎಂದರು.
ಈಗಾಗಲೇ ಸರ್ಕಾರದ ಇಮೇಜ್ ಕಡಿಮೆಯಾಗಿದೆ. ಸಿದ್ದರಾಮಯ್ಯ ಸಭೆ ನಡೆಸಿದರೆ ಸರ್ಕಾರದ ಇನ್ನಷ್ಟು ಇಮೇಜ್ ಕಡಿಮೆಯಾಗುತ್ತದೆ ಎಂಬ ಭಯ ಆಡಳಿತ ಪಕ್ಷದ ನಾಯಕರನ್ನು ಕಾಡುತ್ತಿದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.