ಗಂಗಾವತಿ: ಕಳೆದ ಒಂದು ತಿಂಗಳಿಂದ ಕೊರೊನಾ ತುರ್ತು ಸೇವೆಯಲ್ಲಿ ನಿರತವಾಗಿರುವ ಬಹುತೇಕ ಪೊಲೀಸ್ ಸಿಬ್ಬಂದಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಿಸುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಎಸ್ಪಿ ಜಿ.ಸಂಗೀತಾ, ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದುಕೊಂಡರು.
ಹಲವರಿಗೆ ಇಸಿಜಿ, ರಕ್ತದೊತ್ತಡ, ಸಕ್ಕರೆ ಕಾಯಿಲೆ ಮೊದಲಾದ ಸಮಸ್ಯೆಗಳಿಗೆ ತಪಾಸಣೆ ಮಾಡಲಾಯಿತು. ಕಳೆದ ಒಂದು ತಿಂಗಳಿಂದ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದರಿಂದ ಬಹುತೇಕ ಸಿಬ್ಬಂದಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇಲಾಖೆಯ ಸೂಚನೆ ಮೇರೆಗೆ ಇಲ್ಲಿನ ಮುಖ್ಯ ವೈದ್ಯಾಧಿಕಾರಿ ಈಶ್ವರ ಸವುಡಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ಮಾಡುತ್ತಿರುವ ವೈದ್ಯ ಸಿಬ್ಬಂದಿ, ಪೊಲೀಸ್ ಇಲಾಖೆಯ ನೌಕರರಿಗೆ ಸೂಕ್ತ ಚಿಕಿತ್ಸೆ ನೀಡಿ ಸಲಹೆ ಕೊಟ್ಟು ಕಳಿಸುತ್ತಿದ್ದಾರೆ.