ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಹಾಕಿದರು. ಭೂ ಸುಧರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಅನೇಕ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರೈತ ವಿರೋಧಿ, ಜನವಿರೋಧಿ, ಕಾರ್ಮಿಕ ವಿರೋಧಿ ಧೋರಣೆಯನ್ನು ಸರ್ಕಾರಗಳು ಅನುಸರಿಸುತ್ತಿವೆ. ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣಾ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡುವುದಿಲ್ಲ ಎಂದು ಪಂಜಾಬ್ ಸರ್ಕಾರ ತನ್ನ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ನಮ್ಮ ರಾಜ್ಯದಲ್ಲಿಯೂ ರಾಜ್ಯ ಸರ್ಕಾರ ಇದೇ ರೀತಿಯ ತೀರ್ಮಾನ ತೆಗೆದುಕೊಳ್ಳಬೇಕು. ರೈತ ಪರವಾದ, ಜನ ಪರವಾದ, ಕಾರ್ಮಿಕರ ಪರವಾದ ಕಾಯ್ದೆಗಳನ್ನು ಜಾರಿ ಮಾಡಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.