ಕೊಪ್ಪಳ: ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ.
ತಾಲೂಕಿನ ಹುಲಗಿ ಗ್ರಾಮದಲ್ಲಿ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯದಲ್ಲಿ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ನಂತರ ಮಾತನಾಡಿ, ಬೇರೆ ಬೇರೆ ರಾಜ್ಯಗಳಿಂದ ವಲಸೆ ಕಾರ್ಮಿಕರು ರಾಜ್ಯಕ್ಕೆ ಬಂದ ಮೇಲೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಸೋಂಕಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಒಳ್ಳೆಯ ನಿರ್ಧಾರ ಕೈಗೊಂಡಿದೆ ಎಂದರು.
ಇನ್ನು ಬೆಂಗಳೂರಿನಲ್ಲಿ ಡಿಕೆಶಿ ಮನೆ ಪಕ್ಕದಲ್ಲಿಯೇ ಮನೆ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಲಖನ್ ಜಾರಕಿಹೊಳಿ ನಮ್ಮ ಸಹೋದರ. ಅವರು ನಮ್ಮ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದರು. ರಾಜಕೀಯವೇ ಬೇರೆ ಕುಟುಂಬವೇ ಬೇರೆ. ರಾಜಕೀಯವನ್ನು ಹೊರತುಪಡಿಸಿ ನಾವೆಲ್ಲ ಸೋದರರು ಎಂದು ತಿಳಿಸಿದರು.
ಇನ್ನು ವಿಜಯನಗರ ಕಾಲದ ಕಾಲುವೆಗಳ ಆಧುನೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. 215 ಕಿಲೋಮೀಟರ್ ವ್ಯಾಪ್ತಿಯ ಕಾಲುವೆಗಳ ಆಧುನೀಕರಣ ಮಾಡಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.