ಕೊಪ್ಪಳ: ಬೆಂಗಳೂರನ್ನು ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ ಹೇಳಿದರು.
ಕೊಪ್ಪಳದಲ್ಲಿ ಮಾತನಾಡಿದ ಅವರು, ಕೊರೊನಾ ಎಲ್ಲಿ ಹೆಚ್ಚಾಗಿದೆಯೋ ಅಂತಹ ಪ್ರದೇಶವನ್ನು ಸೀಲ್ಡೌನ್ ಮಾಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸ್ವಕ್ಷೇತ್ರದ ಜೊತೆಗೆ ಇನ್ನೆರಡು ಕ್ಷೇತ್ರಗಳ ಜಬಾವ್ದಾರಿ ವಹಿಸಿಕೊಳ್ಳಿ ಎಂದು ಹೇಳಿದ್ದಾರೆ. ಪ್ರತಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸುವಂತೆ ಸಿಎಂ ಸೂಚಿಸಿದ್ದಾರೆ. ಈಗಾಗಲೇ ಸಚಿವ ಆರ್.ಅಶೋಕ್ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ನಾನು ಬೆಂಗಳೂರಿಗೆ ಹೋಗಿ ಆಸ್ಪತ್ರೆಗಳಿಗೆ ಭೇಟಿ ನೀಡುತ್ತೇನೆ ಎಂದರು.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬೆಡ್ ಹಾಕಲು ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಯಾವಾಗ ಬೇಕಾದರೂ ನಿರ್ಧಾರ ತೆಗೆದುಕೊಳ್ಳಬಹುದು. ಮುಂಜಾಗ್ರತೆ ದೃಷ್ಟಿಯಿಂದ ಈಗಾಗಲೇ ಸುಮಾರು 6-7 ಸಾವಿರ ಬೆಡ್ ಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
ಫಾರಂ ನಂಬರ್ 3 ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಆದಷ್ಟು ಬೇಗನೆ ಈ ಸಮಸ್ಯೆ ಇತ್ಯರ್ಥಪಡಿಸಲಾಗುತ್ತದೆ. ನಾನು ಸಚಿವನಾಗಿ ಈಗ ಮೂರು ತಿಂಗಳಾಗಿದೆ. ಎಲ್ಲಾ ಜಿಲ್ಲೆಗಳ ಪ್ರವಾಸ ಮಾಡಿದ್ದೇನೆ. ಗಂಗಾವತಿಯಲ್ಲಿ ಕೈಗೊಳ್ಳಲಾಗಿರುವ ಅಮೃತಸಿಟಿ ಯೋಜನೆಯ ಕಾಮಗಾರಿಗಳಲ್ಲಿ ಅಕ್ರಮ, ಕಳಪೆಯಾಗಿದ್ದರೆ ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿ ಕಳಪೆಯಾಗಿದ್ದರೆ ಜಿಲ್ಲಾಧಿಕಾರಿಗಳು ನೀಡುವ ವರದಿಯಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.