ಕೊಪ್ಪಳ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದೆ.
ತಾಲೂಕಿನ ಕುಣಕೇರಿ ಗ್ರಾಮದ 60 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಈತ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ನಿನ್ನೆ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆಯಿಂದ ಕೊರೊನಾ ಸೋಂಕಿನಿಂದ ಮೂರು ಜನರು ಸಾವನ್ನಪ್ಪಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.