ಕೊಪ್ಪಳ : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಕೊಡುವುದಕ್ಕೆ ಅವಕಾಶ ನೀಡಲು ಕೊಪ್ಪಳ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೇಕಾದ ಸೌಲಭ್ಯಗಳಿವೆಯಾ ಎಂದು ಜಿಲ್ಲಾಡಳಿತ ಈಗಾಗಲೇ ಪರಿಶೀಲನೆ ನಡೆಸಿದೆ.
ಜಿಲ್ಲೆಯಲ್ಲಿ ಜುಲೈ 21ರ ಸಂಜೆಯ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 586ಕ್ಕೆ ಏರಿದ್ದು, ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ. ಪತ್ತೆಯಾಗುತ್ತಿರುವ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚು ಗಂಭೀರವಲ್ಲದ ಸೋಂಕಿತರಿಗೆ ತಳಕಲ್ ಬಳಿ ಇರುವ ಸರ್ಕಾರಿ ಎಂಜಿನಿಯರ್ ಕಾಲೇಜಿನಲ್ಲಿ ಮಾಡಲಾಗಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಆರೈಕೆ ಮಾಡಲಾಗುತ್ತಿದೆ.
ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 50ರಷ್ಟು ಬೆಡ್‌ಗಳನ್ನು ಸೋಂಕಿತರಿಗೆ ಚಿಕಿತ್ಸೆಗೆ ನೀಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ. ಆದಾಗ್ಯೂ ಒಂದುವೇಳೆ ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ಅವಕಾಶ ನೀಡುವ ಕುರಿತಂತೆ ಜಿಲ್ಲಾಡಳಿತ ಈಗ ತಯಾರಿ ಮಾಡಿಕೊಳ್ಳುತ್ತಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಕೊಪ್ಪಳ ಜಿಲ್ಲೆಯಲ್ಲಿ ಲ್ಯಾಬೊರೇಟರಿ, ಸ್ಕ್ಯಾನಿಂಗ್ ಸೆಂಟರ್‌ಗಳು ಸೇರಿ ಒಟ್ಟು 327 ಖಾಸಗಿ ಆಸ್ಪತ್ರೆಗಳಿವೆ. ಈ ಪೈಕಿ 272 ಆಸ್ಪತ್ರೆಗಳು ಸದ್ಯ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಬಿದ್ದರೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ಅವಕಾಶ ಕಲ್ಪಿಸಲಾಗುತ್ತದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿನ ಸೌಲಭ್ಯ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.