ಮಂಡ್ಯ: ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ, ಮೈಸೂರು- ಬೆಂಗಳೂರು ಹೆದ್ದಾರಿ ಮತ್ತು ರೈಲ್ವೆ ಮಾರ್ಗ, ರೈಲು ನಿಲ್ದಾಣಗಳ ವ್ಯಾಪ್ತಿಯಲ್ಲಿ ಸೆ 29 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ - 275 ರಲ್ಲಿ ಸಂಚರಿಸುವ ವಾಹನ ಹಾಗೂ ರೈಲುಗಳ ಸುಗಮ ಸಂಚಾರಕ್ಕಾಗಿ ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 275 ರಸ್ತೆಯಲ್ಲಿ ಮದ್ದೂರು ತಾಲ್ಲೂಕಿನ ನಿಡಘಟ್ಟ ಗಡಿ ಭಾಗದಿಂದ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗಡಿ ಭಾಗದವರೆಗೆ ಹಾಗೂ ಮಂಡ್ಯ, ಉಪವಿಭಾಗ ವ್ಯಾಪ್ತಿಯಲ್ಲಿರುವ ಎಲ್ಲಾ ರೈಲು ನಿಲ್ದಾಣ, ರೈಲು ಸಂಚರಿಸುವ ಪ್ರದೇಶದಲ್ಲಿ, ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು. ನಿರ್ಬಂಧಿತ ಪ್ರದೇಶದಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಯಾವುದೇ ಧ್ವನಿವರ್ಧಕ ಬಳಸುವುದನ್ನು ನಿರ್ಬಂಧಿಸಲಾಗಿದೆ. ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ. ಬಹಿರಂಗವಾಗಿ ಘೋಷಣೆ ಕೂಗುವುದು, ಪ್ರಚೋಧನಾತ್ಮಕ ಮತ್ತು ಉದ್ರೇಕಕಾರಿಯಾಗಿ ಕಾನೂನು ಸುವ್ಯವಸ್ಥೆಗೆ ಭಂಗ ನಿಷೇಧಿಸಲಾಗಿದೆ. ಭಾಷಣ ಸೇರಿದಂತೆ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿರ್ಬಂಧಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಎಂ ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಂಡ್ಯ ಎಸ್ಪಿ ಎನ್ ಯತೀಶ್ ಮಾಧ್ಯಮಗಳ ಜೊತೆ ಮಾತನಾಡಿ, ಶುಕ್ರವಾರ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟ ನಿಮಿತ್ತ, ಮಂಡ್ಯದಲ್ಲೂ ಕೆಲವು ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿರುವ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಆಯಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧ್ಯಕ್ಷರಿಗೆ, ಬಂದ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ, ಸುಪ್ರೀಂ ಕೋರ್ಟ್ನ ನಿರ್ದೇಶನ ಏನಿವೆ ಎನ್ನುವುದರ ಕುರಿತು ಈಗಾಗಲೇ ನೋಟಿಸ್ಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅದರಲ್ಲೂ ಕೆಲವು ಸಂಘಟನೆಗಳು, ತಾವು ಬೆಂಗಳೂರು- ಮೈಸೂರು ಹೆದ್ದಾರಿ, ರೈಲ್ವೆ ಮಾರ್ಗಗಳನ್ನು ಬಂದ್ ಮಾಡುತ್ತೇವೆ ಎಂದು ಹೇಳಿರುವುದನ್ನು ಗಮನಿಸಿದ್ದೇವೆ. ಅವರಿಗೆಲ್ಲಾ ನಾವಿಗಾಗಲೇ ನೋಟಿಸ್ ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಹೆದ್ದಾರಿ ತಡೆ, ರೈಲು ತಡೆ ಮಾಡಲು ಅವಕಾಶ ಇಲ್ಲ. ಮತ್ತು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಒಂದು ವೇಳೆ ಇದನ್ನೂ ಮೀರಿ ಮಾಡಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅದರಂತೆ, ಎಲ್ಲರೂ ಸಾರ್ವಜನಿಕರಿಗೆ ತೊಂದರೆ ಆಗುವಂತೆ, ಒತ್ತಾಯ ಪೂರ್ವಕವಾಗಿ ಬಂದ್ ಮಾಡುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ. ಆದರೂ ನಾವು ಅನೇಕ ಕಡೆ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದೇವೆ ಎಂದು ತಿಳಿಸಿದ್ದಾರೆ.
ಶಾಲೆಗಳಿಗೆ ರಜೆ ಘೋಷಣೆ: ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್ ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ ಹಿನ್ನೆಲೆ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆಯಿಂದ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ನಾಳೆ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ: ಕುರುಬೂರು ಶಾಂತಕುಮಾರ್ ಸಂದರ್ಶನ