ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ 28 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕಾಲೇಜಿನಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳೇ ಹೆಚ್ಚಾಗಿದ್ದು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಒಟ್ಟು 412 ವಿದ್ಯಾರ್ಥಿನಿಯರಲ್ಲಿ 372 ಮಂದಿ ಬಾಲಕಿಯರಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ 19 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಲವು ಬಾಲಕಿಯರನ್ನು ಕೋವಿಡ್ ಪರೀಕ್ಷೆಗೊಳಪಡಿಸದ ವೇಳೆ 9 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.
ಡಿಡಿಪಿಐ ಹೇಳಿದ್ದೇನು?
ಎಲ್ಲಾ 28 ಕೋವಿಡ್ ಸೋಂಕಿತ ವಿದ್ಯಾರ್ಥಿನಿಯರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಕಾಲೇಜಿಗೆ ಸ್ಯಾನಿಟೈಸರ್ ಮಾಡಿ ಮುಂದಿನ 7 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ ಎಂದು ಡಿಡಿಪಿಐ ಉಮೇಶ್ ತಿಳಿಸಿದ್ದಾರೆ.
ಕೊರೊನಾ ಮೂರನೇ ಅಲೆ ಭಾರತಕ್ಕೆ ಬಂದಿಲ್ಲ, ಆತಂಕ ಪಡುವ ಅಗತ್ಯವಿಲ್ಲ. ಆ ಕಾಲೇಜಿನ ಒಬ್ಬ ವಿದ್ಯಾರ್ಥಿನಿಗೆ ರೋಗಲಕ್ಷಣಗಳು ಕಂಡುಬಂದಿದ್ದರಿಂದ ಟೆಸ್ಟ್ ಮಾಡಿದಾಗ ಸೋಂಕು ಕಾಣಿಸಿಕೊಂಡಿತ್ತು. ಈಗಾಗಿ ಪ್ರೈಮರಿ ಕಾಂಟ್ಯಾಕ್ಟ್ ಇರುವಂತ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 28 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿದ್ದು, ಯಾರಿಗೂ ರೋಗ ಲಕ್ಷಣಗಳು ಕಂಡುಬಂದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಯಾರು ಆತಂಕ ಪಡಬೇಡಿ ಎಂದು ಡಿಎಚ್‌ಒ ಧನಂಜಯ್ ಹೇಳಿದ್ದಾರೆ.
ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾದ ಟಾಲಿವುಡ್ ನಟಿ ಅನುರಾಧಾ: ಕಾರಣವಾಯ್ತೇ ಪ್ರೇಮ ವೈಫಲ್ಯ?