ಮಂಡ್ಯ: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಆಗಮಿಸಿ ಭದ್ರತೆಯ ಕುರಿತಂತೆ ಪರಿಶೀಲನೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ, ನಿರ್ಗಮನದ ವೇಳೆ ಭದ್ರತಾ ಲೋಪವಾಗದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದರು. ಬಂದೋಬಸ್ತ್ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಗೋಪಾಲಯ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಚರ್ಚೆ ನಡೆಸಿದರು.
ಅಮಿತ್ ಶಾ ಅವರು ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲು ಅನುಕೂಲವಾಗುವಂತೆ ನಗರದ ಪಿಇಟಿ ಕ್ರೀಡಾಂಗಣದಲ್ಲಿ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ. ಅಲ್ಲದೇ, ಮದ್ದೂರು ತಾಲೂಕಿನ ಹುಲಿಗೆರೆಪುರದಲ್ಲೂ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಕೇಂದ್ರ ಗೃಹಸಚಿವರು ಬೆಂಗಳೂರಿನಿಂದ ಹುಲಿಗೆರೆಪುರ ಹೆಲಿಪ್ಯಾಡ್‌ಗೆ ಬಂದಿಳಿದು, ಅಲ್ಲಿಂದ ರಸ್ತೆ ಮಾರ್ಗವಾಗಿ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ತೆರಳುವರು.
ಮೆಗಾಡೈರಿ ಸಮಾರಂಭದಲ್ಲಿ ಭಾಗಿ: ಅಲ್ಲಿ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮತ್ತೆ ಹುಲಿಗೆರೆಪುರ ಹೆಲಿಪ್ಯಾಡ್‌ಗೆ ತೆರಳಿ ಮಂಡ್ಯದ ಪಿಇಟಿ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯುವರು. ಅಲ್ಲಿಂದ ರಸ್ತೆ ಮಾರ್ಗವಾಗಿ ಮಂಡ್ಯ ವಿಶ್ವವಿದ್ಯಾನಿಲಯದ ಆವರಣಕ್ಕೆ ಬಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನು ಈಗಾಗಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಅಶೋಕ್ ಜಯರಾಂ, ಎಸ್.ಸಚ್ಚಿದಾನಂದ, ಎಚ್.ಆರ್.ಅರವಿಂದ್, ಎಚ್.ಪಿ.ಮಹೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸುಶ್ರುತ್ ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ, ಸಿ.ಟಿ. ಮಂಜುನಾಥ್, ವಿವೇಕ್ ಸೇರಿದಂತೆ ಹಲವಾರು ಪಕ್ಷದ ಮುಖಂಡರು ಕಾರ್ಯಕರ್ತರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಬೆರೆ ಪಕ್ಷಗಳಿಗಿಂತ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಾಗಿ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ತಂತ್ರಗಾರಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಆತ್ಮವಿಶ್ವಾಸ ಇದೆ ಸುಮಲತಾ ಅವರು ಬಿಜೆಪಿಗೆ ಸೇರುತ್ತಾರೆ ಎಂದು, ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಇದನ್ನೂ ಓದಿ: ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ