ಮಂಡ್ಯ: ಬೆಟ್ಟದ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಕ್ಯಾಂಟರ್ ಉರುಳಿ ಬಿದ್ದು ಮೂವರ ಸ್ಥಿತಿ ಗಂಭೀರ ಹಾಗೂ 35ಜನರಿಗೆ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸವನ ಬೆಟ್ಟದಲ್ಲಿ ನಡೆದಿದೆ. ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮುಗಿಸಿ ವಾಪಸ್ ಆಗುವ ವೇಳೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರು ಮಳವಳ್ಳಿ ತಾಲ್ಲೂಕಿನ ತಮ್ಮಡಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಇಂದು ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಕ್ಯಾಂಟರ್ ಉರುಳಿದೆ. ಸುಮಾರು 30 ರಿಂದ 35 ಜನಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರ ಸ್ಥಿತಿ ಚಿಂತಾ ಜನಕವಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ಹಲಗೂರು ಹಾಗೂ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಡ್ಯ ಮಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಲ್ಲಿ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಬೆಲೆನ ಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿತ್ತು, ಅಪಘಾತ ಗೊಂಡ ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಕಾರು ಸಂಪೂರ್ಣ ಜಖಂ ಆಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತ್ಯೇಕ ಅಪಘಾತ: ವಿಜಯನಗರದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟ ಘಟನೆ ಹೊಸಪೇಟೆಯಲ್ಲಿ ಇಂದು ನಡೆದಿದೆ. ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಕೊಪ್ಪಳ ಜಿಲ್ಲೆಯ ಗಿಣಿಗೇರಿಯ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಹೊಸಪೇಟೆ ನಗರದ ಟಿ.ಬಿ.ಡ್ಯಾಂ ನಿವಾಸಿ ಗಾಳೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಸಿರಸಿನಕಲ್ಲು ಪ್ರದೇಶದ ಚಿತ್ತವಾಡಗೆಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸರಣಿ ಅಪಘಾತ.. ಸಂಪೂರ್ಣ ನಜ್ಜುಗುಜ್ಜಾದ ಕಾರು.. ಅದೃಷ್ಟವಶಾತ್ ಪಾರಾದ ಚಾಲಕ: CCTV Video