ಮಂಡ್ಯ: ಮೈಸೂರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕೆಂದು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಕೆಆರ್‌ಎಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರವಾಸೋದ್ಯಮಕ್ಕೆ ಒಂದು ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಹಾಗಾಗಿ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು.
ಪ್ರವಾಸೋದ್ಯಮ ಅಭಿವೃದ್ಧಿಯಿಂದ ಹಲವರಿಗೆ ಕೆಲಸ ನೀಡಲು ಚಿಂತನೆ ಮಾಡಲಾಗಿದ್ದು, ಜಿಲ್ಲೆಯ ಆರ್ಥಿಕ ಚಟುವಟಿಕೆ ಹೆಚ್ಚಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಕೆಆರ್‌ಎಸ್ ಬೃಂದಾವನಕ್ಕೆ ಹೊಂದಿಕೊಂಡಿರುವ 300 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವನ್ನು ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ ಎಂದು ಹೇಳಿದರು.
ಈ ಹಿಂದಿನ ಸರ್ಕಾರ ಕೆಆರ್‌ಎಸ್ ಬೃಂದಾವನ ಅಭಿವೃದ್ಧಿ ಮಾಡಲು ಯೋಜನೆ ಮಾಡಿತ್ತು. ಹೀಗಾಗಿ ನಾನು ಕೂಡ ಈ ಯೋಜನೆ ಬಗ್ಗೆ ಸಿಎಂ ಬಳಿ ಚರ್ಚಿಸಿ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಸುಮಾರು 100 ವರ್ಷದ ಬೃಂದಾವನ ಆಧುನಿಕರಣದ ಅವಶ್ಯಕತೆ ಇದ್ದು, ಈ ಯೋಜನೆ ಮಾಡಲಾಗುವುದು. ಪ್ರಕೃತಿಗೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ನಡೆಸಲು ತೀರ್ಮಾನ ಮಾಡಿದ್ದು, ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡುವ ಭರವಸೆ ನೀಡಿದರು.