ಮಂಡ್ಯ/ಧಾರವಾಡ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕರ್ತವ್ಯನಿರತ ವೈದ್ಯರ ಮೇಲಿನ ಹಲ್ಲೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ಸದಸ್ಯರು, ವೈದ್ಯರು ಮತ್ತು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮಂಡ್ಯ ಮತ್ತು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ಭಾರತದಲ್ಲಿ ವೈದ್ಯರ ಮೇಲಿನ ಹಲ್ಲೆಗಳು ದಿನೇ ದಿನೇ ಹೆಚ್ಚುತ್ತಿವೆ. ಸೂಕ್ತ ರಕ್ಷಣೆ ಕೊರತೆಯಿಂದ ಇಂತಹ ಘಟನೆಗಳು ಸಂಭವಿಸಲು ಕಾರಣವಾಗುತ್ತಿದ್ದು, ಮುಂದೆ ಇಂಥ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲ್ಲೆಗೆ ಒಳಗಾದ ವೈದ್ಯರಿಗೆ ಕೂಡಲೇ ನ್ಯಾಯ ದೊರಕಿಸಿಕೊಡಬೇಕು. ಅಲ್ಲದೆ, ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಧಾರವಾಡದ ತಹಶೀಲ್ದಾರ್ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಬೆಂಗಳೂರು-ಮೈಸೂರು ಹೆದ್ಧಾರಿಯ ಮೂಲಕ ಸಾಗಿದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿತು. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.