ಮಂಡ್ಯ: ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಸೊಲಬದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಸೊಲಬದೊಡ್ಡಿ ಗ್ರಾಮದ ಮುನಿನಂಜಯ್ಯ(63) ಮೃತ ದುರ್ದೈವಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಮನೆಯಿಂದ ರೈತ ದೇವಸ್ಥಾನಕ್ಕೆ ಹೋಗುವ ವೇಳೆ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾನೆ. ಬಸವೇಶ್ವರ ದೇವಸ್ಥಾನಕ್ಕೆ ಭಜನೆಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿ ಸೊಂಡಿನಲ್ಲಿ ಹೊಡೆದಿದೆ. ಇದರಿಂದ ಕೆಳೆಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಾಗೂ ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಸೂಕ್ತ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಸದ್ಯ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.