ಮಂಡ್ಯ: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮಾಹಿತಿ ನೀಡಿದ್ದು, ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗೆ ಸಕಲ ರೀತಿಯಲ್ಲೂ ಸಿದ್ಧತೆಯಾಗಿದೆ ಎಂದಿದ್ದಾರೆ.
ಜಿಲ್ಲೆಯ 4 ತಾಲೂಕುಗಳಲ್ಲಿ ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಇಲ್ಲಿನ ಪಾಂಡವಪುರ, ಶ್ರೀರಂಗಪಟ್ಟಣ, ಕೃಷ್ಣರಾಜಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಚುನಾವಣೆ ನಡೆಯಲಿದೆ.
ಕೃಷ್ಣರಾಜಪೇಟೆ ತಾಲೂಕಿನ 33 ಗ್ರಾಮ ಪಂಚಾಯಿತಿಗಳಿಂದ ಈಗಾಗಲೇ 48 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಿಂದ ಮತಗಟ್ಟೆಗಳಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಈಗಾಗಲೇ ನಿಗದಿಯಾಗಿರುವ ಮತ ಕೇಂದ್ರಗಳತ್ತ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟು 283 ಮತಗಟ್ಟೆಗಳಿದ್ದು, 539 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಈ ಕುರಿತಂತೆ ತಹಶೀಲ್ದಾರ್ ಎಂ.ಶಿವಮೂರ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಆರ್.ಪೇಟೆ ತಾಲೂಕಿನ 283 ಮತಗಟ್ಟೆಗಳ ಪೈಕಿ 40 ಮತಗಟ್ಟೆಗಳು ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಆ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದರು.
ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಿಂದ ಆಯಾ ಮತಗಟ್ಟೆಗೆ ಮತ ಪೆಟ್ಟಿಗೆ ಸೇರಿದಂತೆ ಅಗತ್ಯ ಸಾಮಗ್ರಿಗಳು, ಅಧಿಕಾರಿಗಳು, ಪೊಲೀಸರು ಹಾಗೂ ಸಿಬ್ಬಂದಿ ತೆರಳಿದ್ದಾರೆ. ಹೀಗಾಗಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: 2ನೇ ಹಂತದ ಗ್ರಾಪಂ ಚುನಾವಣೆ.. ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ