ಮಂಡ್ಯ: ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಕ್ಕರೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ಗೆ ರಾಜೀನಾಮೆ ಪರ್ವ ತಲೆನೋವಾಗಿ ಪರಿಣಮಿಸಿದೆ. ಶುಕ್ರವಾರವಷ್ಟೇ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಅಮಾನತಿಗೆ ಸೆಡ್ಡು ಹೊಡೆದಿರುವ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಸುಮಾರು 70ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ಗೆ ಬೆಂಬಲ ಸೂಚಿಸಲು ನಿರ್ಧಾರ ಮಾಡಿದ್ದಾರೆ. ಯುವ ಕಾಂಗ್ರೆಸ್ ಸೇರಿದಂತೆ ಹಲವು ಘಟಕಗಳ ಪದಾಧಿಕಾರಿಗಳು ಈಗಾಗಲೇ ರಾಜ್ಯ ಕಮಿಟಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಹನಕೆರೆ ಶಶಿ ಕುಮಾರ್, ಮಂಜುನಾಥ್, ಅನಿಲ್ ಕುಮಾರ್, ಅರವಿಂದ, ಲೋಕೇಶ್ ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣನೆ ಮಾಡಿರುವುದರಿಂದ ನೊಂದು ರಾಜೀನಾಮೆ ಸಲ್ಲಿಸುತ್ತಿದ್ದು, ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ಗೆ ಬೆಂಬಲ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ರಾಜೀನಾಮೆ ಪರ್ವದಿಂದ ಮೈತ್ರಿ ಅಭ್ಯರ್ಥಿಗೆ ಮತ್ತಷ್ಟು ಹಿನ್ನಡೆ ಉಂಟಾಗಿದೆ. ಕಾಂಗ್ರೆಸ್ ನಾಯಕರು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದರೆ, ಕಾರ್ಯಕರ್ತರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿ ಸ್ವತಂತ್ರ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ನ ಆಂತರಿಕ ಒಳ ಜಗಳ ಬೀದಿಗೆ ಬಂದಿದ್ದು, ಕಾರ್ಯಕರ್ತರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವರು ಬಹಿರಂಗವಾಗಿಯಾದರೆ, ಮತ್ತೆ ಕೆಲವರು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿದ್ದಾರೆ.