ಮಂಡ್ಯ: ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಕೋವಿಡ್ ಲಸಿಕೆಯ 2ನೇ ಡೋಸ್ ಪಡೆದರು.
ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಾಲೂಕಿನಲ್ಲಿ ಕೋವಿಡ್ ಲಸಿಕೆ ದಾಸ್ತಾನು ಹಾಗೂ ವಿತರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾ ಹಂತದಲ್ಲಿ ನಿಗದಿತ ಪ್ರಮಾಣದಲ್ಲಿ ಲಸಿಕೆ ನೀಡುತ್ತಿದ್ದಾರೆಯೇ? ಅವುಗಳನ್ನು ಸಮರ್ಪಕವಾಗಿ ಜನರಿಗೆ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ತಾಲೂಕು ಆರೋಗ್ಯಾಧಿಕಾರಿ, ಇದುವರೆಗೆ ಲಸಿಕೆ ದಾಸ್ತಾನಿನ ಕೊರತೆ ಆಗಿಲ್ಲ. ಪ್ರತಿದಿನ 100ರಿಂದ 120 ಮಂದಿಗೆ ಲಸಿಕೆ ನೀಡುತ್ತಿದ್ದೇವೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಲಸಿಕೆ ನೀಡಲಾಗುತ್ತಿದೆ ಎಂದರು.
ಓದಿ : ಅನಾರೋಗ್ಯದಿಂದ ಮೃತಪಟ್ರೂ ಕೊರೊನಾ ಭಯ; ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಅಂತ್ಯಕ್ರಿಯೆ
ಕೋವಿಡ್ ಪರೀಕ್ಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ನಲ್ಲಿಟ್ಟು ಚಿಕಿತ್ಸೆ ನೀಡಬೇಕು. ಮನೆಯಲ್ಲಿ ಚಿಕಿತ್ಸೆ ನೀಡಿದರೆ ಅವರು ಗ್ರಾಮದ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸೋಂಕಿತರನ್ನು ಆರೈಕೆ ಮಾಡುವಲ್ಲಿ ವಿಳಂಬ ಹಾಗೂ ಉದಾಸೀನ ಮಾಡಬಾರದು. ಆರೋಗ್ಯ ಇಲಾಖೆಗೆ ಅತೀ ಅಗತ್ಯವಾಗಿ ಬೇಕಾಗಿರುವ ಅವಶ್ಯಕ ವಸ್ತುಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಪೂರೈಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ:
ಪಾಂಡವಪುರ ಪಟ್ಟಣದ ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಗೆ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಕೋವಿಡ್ ರೋಗಿಗಳ ಆರೈಕೆಯ ಕುರಿತು ಪರಿಶೀಲನೆ ನಡೆಸಿದರು.
ಬಳಿಕ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ನೇತೃತ್ವದಲ್ಲಿ ಅಧಿಕಾರಿ ವರ್ಗ ಸಾಕಷ್ಟು ಶ್ರಮಿಸುತ್ತಿದ್ದಾರೆ. ಜಿಲ್ಲೆಯ 13 ಕೇಂದ್ರಗಳಲ್ಲಿ ಆಮ್ಲಜನಕದ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗಾಗಿ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಇಲ್ಲ. ವೆಂಟಿಲೇಟರ್ ವ್ಯವಸ್ಥೆ ಕೂಡ ಲಭ್ಯವಿದೆ ಎಂದರು.