ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಮೂರು ವರ್ಷದ ಮಗಳೊಂದಿಗೆ ತಾಯಿಯೋರ್ವಳು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್ ಘಾಟ್ ಬಳಿ ನಡೆದಿದೆ.
ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ನಿವಾಸಿಗಳಾದ ತಾಯಿ ಭಾರ್ಗವಿ (32), ಮಗಳು ದೀಕ್ಷಾ (03) ಮೃತರು. 5 ವರ್ಷಗಳ ಹಿಂದೆ ಶ್ರೀರಂಗಪಟ್ಟಣದ ದೇವೇಗೌಡನಕೊಪ್ಪಲು ಗ್ರಾಮದ ಪ್ರದೀಪ್ ಕುಮಾರ್ ಜೊತೆ ಭಾರ್ಗವಿ ಮದುವೆಯಾಗಿದ್ದರು. ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಿದ್ದರು. ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮಗಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕಾವೇರಿ ನದಿಯಲ್ಲಿ ತಾಯಿ ಮಗುವಿನ ಶವ ತೇಲುತ್ತಿದ್ದದ್ದನ್ನು ಕಂಡ ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.