ಮಂಡ್ಯ: ಮಂಡ್ಯ ಅಧಿಕಾರಿಗಳ ಹೆಸರಲ್ಲಿ ಮೈಸೂರಿನ ಅಧಿಕಾರಿಗಳು ಪತ್ರ ಬರೆದಿರುವ ಮಾಹಿತಿ ಇದೆ. ಇದರಲ್ಲಿ ಮಂಡ್ಯದ ಅಧಿಕಾರಿಗಳ ಪಾತ್ರ ಇಲ್ಲ ಅನಿಸುತ್ತೆ. ಹಾಗಾಗಿ ಮೈಸೂರಿನ ಅಧಿಕಾರಿಗಳು ಪತ್ರ ಬರೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಸಿಐಡಿ ವರದಿ ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರಿಂದ ಸರ್ಕಾರದಲ್ಲಿ ವರ್ಗಾವಣೆ ದಂಧೆ ಮತ್ತು ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ನಾನು ಮಾಧ್ಯಮಗಳನ್ನು ನೋಡಿ ಈ ವಿಷಯ ತಿಳಿದುಕೊಂಡೆ. ಈ ಬಗ್ಗೆ ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ಇನ್ನೂ ವರದಿ ಸಲ್ಲಿಸಿಲ್ಲ. ಮೈಸೂರಿನ ಇಬ್ಬರು ಕೃಷಿ ಇಲಾಖೆ ಅಧಿಕಾರಿಗಳು ಮಂಡ್ಯ ಅಧಿಕಾರಿಗಳ ಹೆಸರಲ್ಲಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖಾ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡುತ್ತೇನೆ. ನಾನು ದ್ವೇಷಕ್ಕೋಸ್ಕರ ರಾಜಕೀಯ ಮಾಡುವವನಲ್ಲ ಎಂದರು.
ಇದರ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಸಿಐಡಿ ವರದಿ ಬಂದ ಬಳಿಕ ಸತ್ಯಾಂಶ ಹೊರಬರಲಿದೆ. ನಮ್ಮನ್ನು ಟೀಕಿಸುವವರಿಂದ ನಮಗೆ ಸರ್ಟಿಫಿಕೆಟ್ ಬೇಕಿಲ್ಲ ಎಂದು ಹೇಳಿದರು.
ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ : ನಗರದಲ್ಲಿ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಜಿಲ್ಲಾಡಳಿತ, ಜಿ.ಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಸಚಿವ ಚಲುವರಾಯಸ್ವಾಮಿ ಪುಷ್ಪಾರ್ಚನೆ ಸಲ್ಲಿಸಿದರು. ಇದೇ ವೇಳೆ ಇಂಜಿನಿಯರಿಂಗ್ನಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಹಿಂದೆ ಆಡಳಿತ ನಡೆಸಿದವರನ್ನು ನಾವು ನೆನಪಿಸಿಕೊಳ್ಳಬೇಕು. ಇತಿಹಾಸ ಗೊತ್ತಿದ್ದರೆ ಇತಿಹಾಸ ಬರೆಯಲು ಸಾಧ್ಯ. ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರ. ಎರಡೂ ಬಾರಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅನೇಕ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಮಹಾನ್ ವ್ಯಕ್ತಿ. ದೇವರಾಜ ಅರಸು ಅಂದರೆ ರಾಜ್ಯದ ಪ್ರತಿಯೊಬ್ಬರಿಗೂ ಗೌರವ ಇದೆ. ಸಿದ್ದರಾಮಯ್ಯ ಅವರ ಯೋಜನೆಗಳು ದೇವರಾಜ್ ಅವರನ್ನು ನೆನೆಪಿಸುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್, ಸಿಇಓ ಸೇರಿ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ : ಮೈಸೂರು ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು: ಕುಮಾರಸ್ವಾಮಿ