ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್ನಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಶ್ರೀರಂಗಪಟ್ಟಣ ಸೂಕ್ಷ್ಮ ಪ್ರದೇಶವಾಗಿದ್ದು ಬೆಳಿಗ್ಗೆ 11 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ-ಸಮಾರಂಭ, ರ್ಯಾಲಿ, ಪಟಾಕಿ ಸಿಡಿಸುವುದು, ಗುಂಪು ಕಟ್ಟಿಕೊಂಡು ಸಂಚರಿಸುವುದಕ್ಕೆ ನಿರ್ಬಂಧವಿದೆ ಎಂದು ತಾಲೂಕು ದಂಡಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀರಂಗಪಟ್ಟಣದ ಗುಂಬಜ್ನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ತಯಾರಿ ನಡೆದಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಶ್ರೀರಂಗಪಟ್ಟಣ ಠಾಣಾ ವ್ಯಾಪ್ತಿಯನ್ನು ನಿಷೇಧಾಜ್ಞೆ ಮೂಲಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.