ಮಂಡ್ಯ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಜಲಸಮಾಧಿಯಾಗಿರುವ ಘಟನೆ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿಯಲ್ಲಿ ನಡೆದಿದೆ.
ಹೊಳಲು ಗ್ರಾಮದ ಭರತ್ (24) ಮತ್ತು ವಿನೋದ್ (22) ಯುವಕರು ಮೃತ ದುರ್ದೈವಿಗಳು. ಸ್ನೇಹಿತರ ಜೊತೆ ಸಂತೆಬಾಚಹಳ್ಳಿಯ ಗವಿರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.
ನಾಲ್ವರು ಸ್ನೇಹಿತರೊಂದಿಗೆ ದೇವಾಲಯದ ಬಳಿಯ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದ್ದು, ಮೃತ ಯುವಕರ ಶವಕ್ಕಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.
ಸದ್ಯ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.