ಮಂಡ್ಯ: ತಮಿಳುನಾಡು ಸರ್ಕಾರ 7 ಸಾವಿರ ಕೋಟಿ ಖರ್ಚು ಮಾಡಿ ಕಾವೇರಿ ನದಿಗೆ 118 ಕಿ.ಮೀ ಉದ್ದದ ನಾಲೆ ತೋಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ನೆರವಾಗುತ್ತಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
ಕೆಆರ್‌ಎಸ್ ಜಲಾಶಯದ ಮುಖ್ಯ ದ್ವಾರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಜತೆಗೂಡಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಯೋಜನೆಗೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ಸುಮ್ಮನಿದ್ದಾರೆ. ಸಂಸದೆ ಸುಮಲತಾ ಸೇರಿದಂತೆ ರಾಜ್ಯದ ಸಂಸದರು, ಶಾಸಕರು ಕೂಡ ಮೌನ ವಹಿಸಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟು ಅಲ್ಲಿನ ಆರ್‌ಎಸ್‌ಎಸ್ ಸಂಘಟನೆ ಬಲಪಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ.
ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಡಿಯೂರಪ್ಪ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ನಾಡಿನ ಬಹು ಮುಖ್ಯ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡದೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಯಡಿಯೂರಪ್ಪ ತಮ್ಮ ಕುರ್ಚಿ ಉಳಿಸಿಕೊಳ್ಳಲು ಮಾಡಬಾರದ ಕೆಲಸ ಮಾಡುತ್ತಿದ್ದಾರೆ. ಬಿಎಸ್ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುವವರೆಗೆ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಕಿಡಿ ಕಾರಿದ್ದಾರೆ.