ಮಂಡ್ಯ: ಜೆಡಿಎಸ್ ಪಕ್ಷದೊಂದಿಗೆ ಕಾಂಗ್ರೆಸ್ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ತನ್ನ ಸ್ವಂತ ಬಲದಿಂದ ಕೆ.ಆರ್.ಪೇಟೆ, ಹುಣಸೂರು ಸೇರಿದಂತೆ 12ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನಪಡೆದು ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ. ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ. ಉಪಚುನಾವಣೆಯಲ್ಲಿ ಬಿಜೆಪಿಯು ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೇ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯದಾದ್ಯಂತ ಕಾಂಗ್ರೆಸ್ ಪರ ಅಲೆ ಜೋರಾಗಿ ಬೀಸುತ್ತಿದೆ. ಡಿಸೆಂಬರ್ 9ರ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯು ನಡೆಯುತ್ತಿರುವಂತೆ ಕಂಡು ಬಂದರೂ, ನಿಜವಾದ ಸ್ಪರ್ಧೆಯಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಮಾತ್ರ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಹಣದ ಹೊಳೆ ಹರಿಸಿದರೂ ಮೂರನೇ ಸ್ಥಾನದಿಂದ ಮೇಲೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಬಿ. ಚಂದ್ರಶೇಖರ್ ಗೆಲುವು ನಿಚ್ಛಳವಾಗಿದೆ ಎಂದರು.