ಮೈಸೂರು: ಪಾಠ ಮಾಡಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಜಿಲ್ಲೆಯಲ್ಲಿ ಕೇಳಿಬಂದಿದೆ.
ಶಿಕ್ಷಕನ ಈ ಕೃತ್ಯ ಖಂಡಿಸಿ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಶಿಕ್ಷಕ ಕೃಷ್ಣಮೂರ್ತಿ ವಿರುದ್ಧ ಕೇಳಿಬಂದಿದೆ. ಈತ ವಿದ್ಯಾರ್ಥಿನಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುತ್ತೇನೆ ಎಂದು ಶಾಲೆಯ ಖಾಲಿ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಗ್ರಾಮಸ್ಥರು ಹಾಗೂ ಪೋಷಕರು ಇಂದು ಕಿತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಗೆ ಬಂದು ಶಿಕ್ಷಕರನ್ನು ಹೊರಗೆ ಕಳುಹಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ರು.
ನಂತರ ಮುಖ್ಯ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಪರಾರಿಯಾಗಿದ್ದು, ಆತನನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.
ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಶಾಲಾ ಅಡುಗೆ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ಪೋಷಕರು ದೂರು ನೀಡಿದ್ದಾರೆ.