ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣವು ತನಿಖೆಯ ಹಂತದಲ್ಲಿರುವಾಗಲೇ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಯವರು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರಿದರು. ನಗರ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸತ್‌ನಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಯ ಕುರಿತು ಲೆಹರ್ ಸಿಂಗ್ ನೀಡಿರುವ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಪ್ರಕರಣವು ತನಿಖೆಯ ಹಂತದಲ್ಲಿರುವಾಗಲೇ ಬಿಜೆಪಿ ನಾಯಕರು ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಸಂಸದ ಪ್ರತಾಪ್ ಸಿಂಹ ಅವರನ್ನು ಭಯೋತ್ಪಾದಕನಂತೆ ಬಿಂಬಿಸಿ ನಡೆಸಲಾದ ಪ್ರತಿಭಟನೆಯ ಕುರಿತು ಮಾತನಾಡಿದ ಲಕ್ಷ್ಮಣ್, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನಡೆಸಿದ ಪ್ರತಿಭಟನೆಗೂ, ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪ್ರತಾಪ್ ಸಿಂಹ ಮುಸ್ಲಿಂ ವೇಷಧಾರಿಯಾಗಿರುವಂತೆ ಮಾಡಿ ಕೈಯಲ್ಲಿ ಬಾಂಬ್ ಹಿಡಿದಿರುವಂತೆ ಬಿಂಬಿಸಿ ಪ್ರತಿಭಟನೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಶಿವರಾಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದ ಶಿವರಾಮ್ ಹಾಗೂ ಕಾಂಗ್ರೆಸ್‌ಗೂ ಯಾವ ಸಂಬಂಧವೂ ಇಲ್ಲ. ಶಿವರಾಮ್ ಕಾಂಗ್ರೆಸ್ ಕಾರ್ಯಕರ್ತರಲ್ಲ, ಕೇವಲ ಸಿಎಂ ಸಿದ್ದರಾಮಯ್ಯ ಬಂದಾಗ ಹಿಂದೆ, ಮುಂದೆ ನಿಂತಿರುತ್ತಾರೆ ಅಷ್ಟೇ. ಸಂಸದ ಪ್ರತಾಪ್ ಸಿಂಹ ಅವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಎಂದೂ ಹೇಳಿಲ್ಲ, ಪ್ರತಾಪ್ ಸಿಂಹ ಗೌರವಾನ್ವಿತ ಸಂಸತ್ ಸದಸ್ಯರು ಎಂದರು.
ಬೆಳಗಾವಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಬಿಜೆಪಿ ನಾಯಕರು ವಂಟಮುರಿಗೆ ಭೇಟಿ ನೀಡಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ 8 ವರ್ಷದಿಂದ ಏನೂ ಮಾಡಿಲ್ಲ: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರದ ಕುರಿತು ಮಾತನಾಡಿ, ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಬೇಕೆಂಬುದು ಪ್ರತಾಪ ಸಿಂಹ ಪ್ರಸ್ತಾವನೆ ಮಾಡಿ ಸೂಚಿಸಿರುವುದಲ್ಲ. ಈ ಹಿಂದೆ 2015ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರೇ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಸೂಚಿಸಿದ್ದರು. ಸಚಿವ ಸಂಪುಟ ಇದಕ್ಕೆ ಒಪ್ಪಿಗೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ಎಂಟು ವರ್ಷದಿಂದ ಏನನ್ನೂ ಮಾಡಿಲ್ಲ. ಈ ಬಗ್ಗೆ ಪ್ರತಾಪ್ ಸಿಂಹ ಮೊದಲು ಕೇಂದ್ರದ ಜೊತೆ ಮಾತನಾಡಲಿ ಎಂದು ಹೇಳಿದರು.
ಇದನ್ನೂ ಓದಿ: ಭಾರತ ಕೇವಲ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ