ಮೈಸೂರು: ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಮೊದಲು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಸೇರಿದಂತೆ ಇತರ ಸಚಿವರ ಜೊತೆ ಆಗಮಿಸಲಿರುವ ಸಿಎಂ, ಮೊದಲು ಹೆಲಿಪ್ಯಾಡ್ ನಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಕೆ.ಆರ್.ಎಸ್. ಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿರುವ ಸಿಎಂ ಅವರಿಗೆ ಚಾಮುಂಡಿ ಬೆಟ್ಟದ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲು ಸಕಲ ಸಿದ್ಧತೆಯೊಂದಿಗೆ ತಯಾರಾಗಿದೆ.
ಕಬಿನಿ ಮರೆತ ಸಿಎಂ: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ ಸಹ ತುಂಬಿದ್ದು, ಸಂಪ್ರದಾಯದಂತೆ ಕೆ.ಆರ್.ಎಸ್ ಗೆ ಬಾಗಿನ ಅರ್ಪಿಸಲು ಆಗಮಿಸುವ ಸಿಎಂ ಕಬಿನಿಗೂ ಬಾಗಿನ ಅರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ, ಈ ಬಾರಿ ಯಡಿಯೂರಪ್ಪ ಅವರು ಆ ಸಂಪ್ರದಾಯವನ್ನು ಮರೆತಿದ್ದಾರೆ ಎನ್ನುತ್ತಾರೆ ಸಾರ್ವಜನಿಕರು.