ಮೈಸೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿಯರು ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತಿ, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ಬೆಟ್ಟದ ಪಾದದ ಬಳಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ, ರಾಜ್ಯ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ನೂರಾರು ಮಹಿಳಾ ಕಾರ್ಯಕರ್ತೆಯರು ಜಮಾಯಿಸಿದ್ದರು. ಈಡುಗಾಯಿ ಒಡೆದು ಪೂಜೆ ಸಲ್ಲಿಸಿ, ನೆಟ್ಟ ಡಿಸೋಜ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ನಂತರ ತಾಯಿ ಚಾಮುಂಡೇಶ್ವರಿಗೆ ಬಾಗಿನ ಅರ್ಪಿಸಿದರು.
ಚಾಮುಂಡಿ ತಾಯಿ ದೇವಸ್ಥಾನದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಹಾಲಿ ಮತ್ತು ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕರು, ಕಾರ್ಯಕರ್ತರು, ಸದಸ್ಯರು ಮತ್ತು ಈ ಕರ್ನಾಟಕ ರಾಜ್ಯದ ಜನತೆಗೆ ಹಾಗೂ ಕಾಂಗ್ರೆಸ್ಗೆ ಮತ ನೀಡಿದ ಎಲ್ಲ ಜನರಿಗೆ, ಅವರ ಕುಟುಂಬಕ್ಕಾಗಿ ಪ್ರಾರ್ಥಿಸಿದ್ದಾಗಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮಾರ್ಚ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಾವೇಶ ನಡೆಯುವ ಸಂದರ್ಭದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಯಿ ಸನ್ನಿಧಿಗೆ ಬಂದು ಬಾಗಿನ ಸೇವೆ ಮಾಡುತ್ತೇವೆ ಎಂದು ಹರಕೆ ಹೊತ್ತಿದ್ದೆವು ಎಂದರು.
ಇದನ್ನೂ ಓದಿ: 'ಅಮೃತ್ ಭಾರತ್ ಸ್ಟೇಷನ್' ಯೋಜನೆಯಡಿ ಮೈಸೂರು ವಿಭಾಗದ 15 ರೈಲು ನಿಲ್ದಾಣಗಳ ಅಭಿವೃದ್ಧಿ: ಡಿಆರ್ಎಂ ಶಿಲ್ಪಿ ಅಗರ್ವಾಲ್
ನಾಳೆ ಮೈಸೂರಿಗೆ ರಾಷ್ಟ್ರಪತಿ; ತಮಿಳುನಾಡಿನ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿರುವ ದ್ರೌಪದಿ ಮುರ್ಮು