ಮೈಸೂರು: ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಅಧಿಕಾರಗಳ ಸಭೆ ನಡೆಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಏನೆಲ್ಲ ಕ್ರಮ ಕೈಗೊಳ್ಳಬೇಕೆಂಬುದನ್ನು ಚರ್ಚಿಸುವುದಾಗಿ ತಿಳಿಸಿದರು.
ಕೆಲವು ದಿನಗಳಿಂದ ಅಧಿಕಾರಿ ಮತ್ತು ವೈದ್ಯರುಗಳ ನಡುವೆ ಸಮನ್ವಯದ ಕೊರತೆ ಉಂಟಾಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಲಾಗಿದೆ. ವೈದ್ಯರ ಬೇಡಿಕೆಯಂತೆ ತಿಂಗಳಲ್ಲಿ 2-3 ದಿನಗಳ ರಜೆ ಬೇಕು ಎಂದು ಕೇಳಿದ್ದಾರೆ. ಈ ಬಗ್ಗೆ ಚರ್ಚಿಸಬೇಕು.
ವೈದ್ಯರು ರಜೆ ಪಡೆದ ನಂತರ ನೆಮ್ಮದಿಯಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಇವೆಲ್ಲವುಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಹೆಚ್ಚಾಗಿರುವ ಸೋಂಕಿತ ಪ್ರಕರಣ ಹಾಗೂ ಸಾವಿನ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತೆ ಎಂದರು.